ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್ ಅವರು ತಿಳಿಸಿದ್ದಾರೆ.
ಈ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿಕೊಳ್ಳಬೇಕು. ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ಇಂತಿವೆ : ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಮತ್ತು ಎಳ್ಳು ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.
ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ ಮತ್ತು ಗ್ರಾಮಪಂಚಾಯಗಳಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು. ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ 2 ಅಚ್ಚುಕಟ್ಟಾಗಿ ನಡೆಯಲಿ
ಜೂನ್ 14 ರಿಂದ ಜೂನ್ 22ರವರೆಗೆ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ 2 ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಹೇಳಿದರು. ಶಾಲಾ ಶಿಕ್ಷಣ ಇಲಾಖೆಯಿಂದ ಜೂನ್ 12ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಗಸೂಚಿಯನುಸಾರ ಪರೀಕ್ಷೆ ನಡೆಯಬೇಕು. ವಿದ್ಯಾರ್ಥಿಗಳು ನಿರ್ಭಯದಿಂದ ಪರೀಕ್ಷೆ ಬರೆಯುವಂತೆ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಪಾಲನೆಗೆ ಸೂಕ್ತ ವ್ಯವಸ್ಥೆಯಾಗಬೇಕು. ಬೇರೆ ಬೇರೆ ಪರೀಕ್ಷಾ ಕಾರ್ಯಗಳಿಗೆ ನಿಯೋಜನೆಗೊಂಡ ವಿವಿಧ ಹಂತದ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯ ಅರಿತು ಜವಾಬ್ದಾರಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಹೊಸಪೇಟೆ ತಾಲೂಕಿನಲ್ಲಿ 8, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 2. ಹರಪನಹಳ್ಳಿ ತಾಲೂಕಿನಲ್ಲಿ 5, ಹಡಗಲಿ ತಾಲೂಕಿನಲ್ಲಿ 3, ಕೂಡ್ಲಿಗಿ ತಾಲೂಕಿನಲ್ಲಿ 4 ಸೇರಿ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ 6,973 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಪರೀಕ್ಷೆಗೆ ಕೇಂದ್ರ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಸರಕಾರಿ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯ ಗುರುಗಳನ್ನು ಮಂಡಳಿಯಿಂದ ನೇಮಕ ಮಾಡಲಾಗಿದೆ. ಪರೀಕ್ಷಾ ಕೊಠಡಿ ಸಹ ಶಿಕ್ಷಕರನ್ನು ನೇಮಕ ನಿರ್ದೇಶಕರಾದ ಯುವರಾಜ ನಾಯ್ಕ ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿಬಾಬು, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಲೀಂ ಪಾಶಾ, ವಿವಿಧ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು. ಉಪ ಅಧೀಕ್ಷಕರು ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.
ಕೆರೆಗಳಲ್ಲಿ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಳಕ್ಕೆ 100 ಕೋಟಿ ರೂಪಾಯಿಗಳ ಅನುದಾನ
ರಾಜ್ಯದ ಕರೆಗಳಲ್ಲಿ ಮುಂಗಾರು ಮಳೆಯ ನೀರಿನ ಸಂಗ್ರಹಣಾ ಸಾಮರ್ಥ್ಯವನ್ನ ವೃದ್ಧಿಸುವ ನಿಟ್ಟಿನಲ್ಲಿ 100 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ ಮೊದಲ ಹಂತದಲ್ಲಿ 93 ಕೆರೆಗಳನ್ನ ಅಭಿವೃದ್ಧಿಪಡಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದರು. ಅವರು ವಿಕಾಸಸೌಧದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. 2023 ನೇ ಸಾಲಿನಲ್ಲಿ ತೀವ್ರ ಮಳೆಯ ಕೊರತೆಯಿಂದ ರಾಜ್ಯದಲ್ಲಿ ಉಂಟಾದ ಜಲಕ್ಷಾಮದಿಂದ ಸುಮಾರು 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಈ ಬಾರಿ ಮುಂಗಾರು ಒಳ್ಳೆಯ ರೀತಿಯಲ್ಲಿ ಮಳೆಯನ್ನು ತರುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಕೆರೆಗಳಲ್ಲಿ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು ಹಾಗೂ ನೀರು ಪೋಲಾಗದಂತೆ ತಡೆಯಲು ಸಣ್ಣ ನೀರಾವರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ಪರಿಶೀಲನೆ ನಡೆಸಿ ಸರಕಾರ ಖಆಒಈ ನಿಂದ 100 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಈ ಹಣದಲ್ಲಿ ಕೆರೆಗಳ ಅಭಿವೃದ್ಧಿ ಪಡಿಸಿ, ಕೆರೆಗಳಲ್ಲಿ ನೀರು ಶೇಖರಣೆ ಮಟ್ಟವನ್ನು ಹೆಚ್ಚಿಸಿ ರೈತರಿಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಮೊದಲ ಹಂತದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ 93 ಕೆರೆಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು. ಈಗಾಗಲೇ 93 ಕೆರೆಗಳನ್ನು ಇಲಾಖೆ ಗುರುತಿಸಿದ್ದು ಕ್ರಿಯಾಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಂಡು ಅನುಷ್ಠಾನಗೊಳಿಸಿದಲ್ಲಿ ಮುಂಬರುವ ದಿನಗಳಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವವನ್ನು ತಡೆಯಲು ಸಹಾಯಕವಾಗಲಿದೆ. ಹಾಗೆಯೇ ಮಳೆ ನೀರು ಕೆರೆಗಳಿಗೆ ಸರಾಗವಾಗಿ ಹರಿದು ನೀರು ಶೇಖರಣೆ ಗರಿಷ್ಠ ಮಟ್ಟದಲ್ಲಿ ಆಗುವಂತೆ ಮಾಡಲು ಕಾರ್ಯಯೋಜನೆಯನ್ನು ಸಿದ್ಧಪಡಿಸಿ ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ತರಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.