ಆತ್ಮೀಯ ರೈತ ಬಾಂಧವರೇ,
ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ವಿವಿಧ ಅಧಿಸೂಚಿತ ಬೆಳೆಗಳಿಗೆ ನೋಂದಣಿ
ಪ್ರಸಕ್ತ ಮುಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ರೈತರು ಅಧಿಸೂಚಿತ ಬೆಳೆಗಳ ನೋಂದಣಿಗೆ ಸರಕಾರ ಅಧಿಸೂಚನೆ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಅನುಷ್ಟಾನ ಕುರಿತ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಧಿಸೂಚಿತ ಬೆಳೆಗಳಿಗೆ ಬೆಳೆಸಾಲ ಪಡೆದ ರೈತರಿಗೆ ಈ ಯೋಜನೆ ಕಡ್ಡಾಯವಾಗಿದ್ದು, ಒಂದು ವೇಳೆ ಬೆಳೆಸಾಲ ಪಡೆದ ರೈತರು ಈ ಯೋಜನೆಯಡಿ ಭಾಗವಹಿಸಲು ಇಚ್ಚಿಸದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದೆಂದು ತಿಳಿಸಿದರು.
ಇದನ್ನೂ ಓದಿ:-
✅ ಹೆಚ್ಚುವರಿ ಹಳ್ಳಿವಾರು ರೈತರಿಗೆ ಪರಿಹಾರ ಹಣ ಜಮಾ ಪಟ್ಟಿ ಬಿಡುಗಡೆ
ಹೊಸ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲಿ ಚೆಕ್ ಮಾಡಿ
ಬೆಳೆಸಾಲ ಪಡೆಯದ ರೈತರಿಗೆ ಬೆಳೆ ವಿಮೆ ಯೋಜನೆಯು ಐಚ್ಛಿಕವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಯುನಿರ್ವಸಲ್ ಸೊಂಪೊ ಜಿ.ಐ.ಸಿ. ವಿಮಾ ಕಂಪನಿ ಆಯ್ಕೆಯಾಗಿದ್ದು, ಆಸಕ್ತ ರೈತರು ಕೊನೆಯ ದಿನಾಂಕದವರೆಗೆ ಕಾಯದೆ ಅಧಿಸೂಚಿತ ಬೆಳೆಗೆ ಬ್ಯಾಂಕ್, ಆರ್ಥಿಕ ಸಂಸ್ಥೆಗಳು, ಸಾಮಾನ್ಯ ಸೇವಾ ಕೇಂದ್ರಗಳು, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ವಿಮಾ ಕಂತು ತುಂಬಿ ಬೆಳೆಗೆ ವಿಮೆ ಮಾಡಿಸಬಹುದಾಗಿದೆ. ಮುಂಗಾರು ಹಂಗಾಮಿನಲ್ಲಿ ಆಹಾರ ಬೆಳೆಗಳಿಗೆ ಬೆಳೆ ವಿಸ್ತೀರ್ಣಕ್ಕೆ ತಕ್ಕಂತೆ ಬೆಳೆ ವಿಮಾ ಕಂತಿನ ಶೇಕಡಾ 2 ರಷ್ಟು ಹಾಗೂ ವಾಣಿಜ್ಯ ಬೆಳೆಗಳಿಗೆ ಬೆಳೆ ವಿಮಾ ಕಂತಿನ ಶೇಕಡಾ 5 ರಷ್ಟು ರೈತರು ಪಾವತಿಸಬೇಕು ಎಂದರು.
ಸ್ಥಳೀಯ ಗಂಡಾಂತರಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸೋಟ ಮತ್ತು ಗುಡುಗು ಮಿಂಚುಗಳಿಂದಾಗಿ ಆಗುವ ಬೆಂಕಿ ಅವಘಡ, ಬೆಳೆ ನಷ್ಟ ಸಂಭವಿಸಿದರೆ, ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ನೇರವಾಗಿ ಸಂಬಂಧಪಟ್ಟ ಅನುಷ್ಠಾನಗೊಳಿಸುವ ವಿಮಾ ಸಂಸ್ಥೆಗಳ ಕಛೇರಿಗಳಿಗೆ ಅಥವಾ ಹಣಕಾಸು ಸಂಸ್ಥೆ ಅಥವಾ ಕೃಷಿ, ತೋಟಗಾರಿಕೆ ಇಲಾಖೆ ಮೂಲಕ ತಕ್ಷಣ ಸೂಚನೆ ನೀಡತಕ್ಕದ್ದು. ಇಂತಹ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸತಕ್ಕದ್ದು ಎಂದು ತಿಳಿಸಿದರು.
ಈ ಯೋಜನೆಯಡಿ 2024ರ ಮುಂಗಾರು ಹಂಗಾಮಿನಡಿಯಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಪಡಿಸಲಾಗಿದೆ. ಬೆಳೆ ವಿಮೆ ಮಾಡಿಸುವ ರೈತರು ಫೂಟ್ಸ್ ತಂತ್ರಾಂಶದ ಎಫ್ ಐಡಿ ಹೊಂದಿರುವುದು ಕಡ್ಡಾಯವಾಗಿದೆ.
ಬೆಳೆ ವಿಮೆ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ, ತಾಲೂಕ ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಬೆಳೆ ವಿಮೆ ಸಂಸ್ಥೆ ಕಛೇರಿಗೆ ಅಥವಾ https://www.samrakshane.karnataka.gov.in ಜಾಲತಾಣ ಭೇಟಿ ನೀಡಬಹುದಾಗಿದೆ ಎಂದು ತಿಳಿಸಿದರು. ಈ ಬಗ್ಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲು ಸಹ ಜಿಲ್ಲಾಧಿಕಾರಿಗಳು ಸೂಚಿಸಿದರು.